ಬಿಪಿಎಲ್‌ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನ: ಕೋಟ ಶ್ರೀನಿವಾಸ ಪೂಜಾರಿ

  • ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್
  • ಶೀಘ್ರ ಅನುಷ್ಠಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಜ್ಯ ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಶೀಘ್ರ ಅನುಷ್ಠಾನಕ್ಕೆ ತರಲು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದಲ್ಲಿ ಮಂಗಳವಾರ 2022-23ನೇ ಸಾಲಿನ ಎಸ್ ಸಿ ಎಸ್ ಪಿ (ಪರಿಶಿಷ್ಟ ಜಾತಿ ವಿಶೇಷ ಅನುದಾನ), ಟಿ ಎಸ್ ಪಿ(ಪರಿಶಿಷ್ಟ ಪಂಗಡ ವಿಶೇಷ ಅನುದಾನ) ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.

"ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ 75 ಯೂನಿಟ್ ವಿದ್ಯುತ್ ಸರಬರಾಜು ಮಾಡುವ ಯೋಜನೆ ರೂಪಿಸಲಾಗಿದೆ. ಇಂಧನ ಇಲಾಖೆ ಅಧಿಕಾರಿಗಳು ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು" ಎಂದು ಅವರು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಲ್ಲೆಂದರೆಲ್ಲಿ ನಿಮ್ಮ ವಾಹನ ನಿಲ್ಲಿಸಬೇಡಿ: ನಿಲ್ಲಿಸಿದರೆ ಚಕ್ರಕ್ಕೆ ಬೀಳುತ್ತೆ ಕ್ಲ್ಯಾಂಪ್

"ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ₹20 ಸಾವಿರ ಘಟಕ ಯೋಜನೆಯ ಸಹಾಯಧನದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು. ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ವಿಶೇಷವಾಗಿ ಈ ಸಮುದಾಯಕ್ಕೆ ವಸತಿ ಯೋಜನೆ ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು" ಎಂದು ಸಚಿವರು ಸೂಚಿಸಿದರು.

ರಾಜ್ಯದಲ್ಲಿ ಶಾಲಾ ಕಟ್ಟಡಗಳ ಅವಶ್ಯಕತೆ ಇದ್ದು, ಶೇ.50ಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿರುವ ಶಾಲಾ ಕಟ್ಟಡ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಶೀಘ್ರವೇ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಹೇಳಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ ಮಣಿವಣ್ಣನ್, ಇಲಾಖೆ ಆಯುಕ್ತ ಡಾ ಕೆ ರಾಕೇಶ್ ಕುಮಾರ್, ಇಲಾಖೆ ಸಲಹೆಗಾರರಾದ ಡಾ ವೆಂಕಟಯ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್