ಬಿಬಿಎಂಪಿ | ಸಂಚಾರ ದಟ್ಟಣೆ ತಡೆಯಲು ಸರ್ವೀಸ್ ರಸ್ತೆಗಳಲ್ಲಿ 'ನೋ ಪಾರ್ಕಿಂಗ್' ಬೋರ್ಡ್‌ ಅಳವಡಿಕೆಗೆ ಸೂಚನೆ

traffic jam
  • ಸರ್ವೀಸ್ ರಸ್ತೆಯಲ್ಲಿ ಮಾರಾಟ ನಿಷೇಧ
  • ಮ್ಯಾನ್ ಹೋಲ್‌ಗಳ ದುರಸ್ತಿಗೆ ಸೂಚನೆ

ನಗರದಲ್ಲಿ ಸಂಚಾರ ದಟ್ಟಣೆ ತಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು, ಹೊರವರ್ತುಲ ರಸ್ತೆಯ ಸರ್ವೀಸ್ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡದಂತೆ ಕ್ರಮವಹಿಸಲು ಸಂಚಾರ ಪೊಲೀಸರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಸರ್ವೀಸ್ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವುದರಿಂದ ವಾಹನ ಸಂಚಾರಕ್ಕೆ, ಜನರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಹೀಗಾಗಿ, ಸರ್ವೀಸ್‌ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿರ್ಬಂಧಿಸಬೇಕು" ಎಂದರು. 

"ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು. ಸಂಚಾರಿ ಪೊಲೀಸ್ ವಿಭಾಗ ಮತ್ತು ಪಾಲಿಕೆ ಸಹಯೋಗದಲ್ಲಿ ‘ನೋ ಪಾರ್ಕಿಂಗ್’ ಫಲಕ ಅಳವಡಿಸಬೇಕು" ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. 

“ಹೊರವರ್ತುಲ ಮತ್ತು ನಗರದ ಪ್ರಮುಖ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪರಿಗಳು ಅಂಗಡಿಗಳನ್ನು ಇಟ್ಟಿದ್ದರೆ, ಈ ಕೂಡಲೇ ಅವುಗಳನ್ನು ತೆರವುಗೊಳಿಸಬೇಕು. ಅಲ್ಲದೇ, ಕೆಪಿಟಿಸಿಎಲ್, ಬೆಸ್ಕಾಂ, ಬೆಂಗಳೂರು ಜಲಮಂಡಳಿ ಸೇರಿದಂತೆ ಇನ್ನಿತರ ಇಲಾಖೆಗಳು ಕೆಲಸ ಮಾಡುವ ಸಾಮಗ್ರಿಗಳನ್ನು ರಸ್ತೆ ಬದಿ, ಪಾದಚಾರಿ ಮಾರ್ಗಗಳಲ್ಲಿ ಜನ ಸಂಚಾರಕ್ಕೆ ತೊಂದರೆಯಾಗುವಂತೆ ಉಳಿಸದೇ ಅವುಗಳನ್ನು ಸೂಕ್ತ ಪ್ರದೇಶಕ್ಕೆ ತಲುಪಿಸುವ ಕಾರ್ಯ ಕೈಗೊಳಬೇಕು" ಎಂದರು.

ಈ ಸುದ್ದಿ ಓದಿದ್ದೀರಾ?: ಉಪ ಲೋಕಾಯುಕ್ತ ಹುದ್ದೆ ಭರ್ತಿ ವಿಚಾರ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

“ರಸ್ತೆಗಳಲ್ಲಿ, ಪಾದಾಚಾರಿ ಮಾರ್ಗಗಳಲ್ಲಿ ಕಸ, ಕಟ್ಟಡ ಸಾಮಾಗ್ರಿ ಕಂಡು ಬಂದರೆ ಸಂಬಂಧ ಪಟ್ಟವರಿಗೆ ದಂಡ ವಿಧಿಸಿ ಎಂದಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಮ್ಯಾನ್ ಹೋಲ್‌ಗಳು ರಸ್ತೆ ಮಟ್ಟಕ್ಕಿಂತ ಎತ್ತರವಾಗಿದ್ದು, ಇದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಆಗಲಿದೆ. ಆದ್ದರಿಂದ ಮ್ಯಾನ್ ಹೋಲ್‌ಗಳು ಎಲ್ಲೆಲ್ಲಿ ರಸ್ತೆ ಮಟ್ಟಕ್ಕಿಂತ ಎತ್ತರವಾಗಿವೆ ಎಂಬುದನ್ನು ಜಲಮಂಡಳಿಯಿಂದ ಗುರುತಿಸಿ ಅವುಗಳನ್ನು ದುರಸ್ತಿ ಪಡಿಸಬೇಕು” ಎಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಫರ್ವೇಜ್, ಬಿಡಿಎ ಆಯುಕ್ತ ರಾಜೇಶ್ ಗೌಡ, ಜಲಮಂಡಳಿ ಅಧ್ಯಕ್ಷ ಜಯರಾಮ್, ಸಂಚಾರ ವಿಭಾಗದ ಜಂಟಿ ಆಯುಕ್ತ ರವಿಕಾಂತೇಗೌಡ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಬಿಎಂಟಿಸಿ ನಿರ್ದೇಶಕ ಸೂರ್ಯಸೇನ್, ಬಿಬಿಎಂಪಿ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಕೆಎಸ್ಆರ್ಸಿ, ಬಿಡಿಎ ಇನ್ನಿತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್