ಬಿಬಿಎಂಪಿ| ಹೊಸದಾಗಿ ವಾರ್ಡ್‌ ವಿಂಗಡಿಸಲು ಹೈಕೋರ್ಟ್‌ಗೆ ಅರ್ಜಿ

  • ಚಾಮರಾಜಪೇಟೆ ಕ್ಷೇತ್ರದ ಪ್ರತಿ ವಾರ್ಡ್‌ಗೆ 39 ಸಾವಿರ ಜನಸಂಖ್ಯೆ
  • ವಕೀಲ ಎಸ್ ಇಸ್ಮಾಯಿಲ್ ಜಬೀವುಲ್ಲಾ ಅವರಿಂದ ಅರ್ಜಿ ಸಲ್ಲಿಕೆ 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿದಂತೆ, 2022ರ ಜುಲೈ 14ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಿ ಹೊಸದಾಗಿ ವಾರ್ಡ್‌ಗಳನ್ನು ವಿಂಗಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಈ ಅರ್ಜಿಯನ್ನು ವಕೀಲ ಎಸ್ ಇಸ್ಮಾಯಿಲ್ ಜಬೀವುಲ್ಲಾ ಅವರು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ರಾಜ್ಯ ಚುನಾವಣಾ ಆಯೋಗವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ವಾರ್ಡ್‌ ಮರುವಿಂಗಡಣೆಯಲ್ಲಿ ತಾರತಮ್ಯ

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ್‌ಗಳ ರಚನೆಯಲ್ಲಿ ತಾರತಮ್ಯ ಮಾಡಲಾಗಿದೆ. ಗೋವಿಂದರಾಜನಗರ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‌ಗೆ ಸರಾಸರಿ 30 ಸಾವಿರ ಜನಸಂಖ್ಯೆ ನಿಗದಿಪಡಿಸಿ, ವಾರ್ಡ್‌ಗಳ ಸಂಖ್ಯೆ ಹೆಚ್ಚಿಸಿದೆ. ಆದರೆ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಪ್ರತಿ ವಾರ್ಡ್‌ಗೆ ಸರಾಸರಿ 39 ಸಾವಿರ ಜನಸಂಖ್ಯೆ ನಿಗದಿಪಡಿಸಲಾಗಿದೆ. ಹಿಂದೆ ಇದ್ದ ಏಳು ವಾರ್ಡ್‌ಗಳ ಸಂಖ್ಯೆಯನ್ನು 6ಕ್ಕೆ ಇಳಿಸಲಾಗಿದೆ. ಹಾಗೂ ಕೆ ಆರ್ ಮಾರ್ಕೆಟ್ ವಾರ್ಡ್ ಅನ್ನು ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಒಂದು ನಿಮಿಷದ ಓದು | ಆಗಸ್ಟ್‌ 10 ರಿಂದ 13ರವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ

2022ರ ಜುಲೈ 14ರಂದು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಡ್‌ ರಚಿಸಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ಹೊಸದಾಗಿ ವಾರ್ಡ್‌ ರಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಈ ಅರ್ಜಿ ಇತ್ಯರ್ಥಗೊಳ್ಳುವವರೆಗೆ ಬಿಬಿಎಂಪಿ ಚುನಾವಣೆಗೆ ಅಧಿಸೂಚನೆ ಹೊರಡಿಸದಂತೆ ರಾಜ್ಯ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್