ಬಿಬಿಎಂಪಿ ವಾರ್ಡ್‌ ಮೀಸಲಾತಿ ಆಗಸ್ಟ್‌ 16ರವರೆಗೆ ಅಂತಿಮಗೊಳಿಸಬೇಡಿ: ಹೈಕೋರ್ಟ್‌ ಸೂಚನೆ

  • ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ
  • ವಾರ್ಡ್‌ಗಳ ಜನಸಂಖ್ಯೆ ನಿಗದಿ ಮಾಡುವಲ್ಲಿ ತಾರತಮ್ಯ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿದಂತೆ ಆಗಸ್ಟ್ 16ರವರೆಗೆ ವಾರ್ಡ್‌ವಾರು ಮೀಸಲಾತಿ ಪಟ್ಟಿ ಅಂತಿಮಗೊಳಿಸಬೇಡಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ.

ವಕೀಲ ಎಸ್ ಇಸ್ಮಾಯಿಲ್ ಜಬಿವುಲ್ಲಾ ಅವರು, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಅರ್ಜಿ ವಿಚಾರಣೆ ನಡೆಸಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 16ಕ್ಕೆ ಮುಂದೂಡಿದರು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ| ಹೊಸದಾಗಿ ವಾರ್ಡ್‌ ವಿಂಗಡಿಸಲು ಹೈಕೋರ್ಟ್‌ಗೆ ಅರ್ಜಿ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ, "ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಡ್‌ಗಳ ಮರುವಿಂಗಡಣೆ ಅವೈಜ್ಞಾನಿಕವಾಗಿ ಮಾಡಲಾಗಿದೆ. ವಾರ್ಡ್‌ಗಳ ಜನಸಂಖ್ಯೆ ನಿಗದಿ ಮಾಡುವಲ್ಲಿ ತಾರತಮ್ಯ ಮಾಡಲಾಗಿದೆ. ಹಾಗಾಗಿ, ವಾರ್ಡ್ ಮರು ವಿಂಗಡಣೆಯ ಅಧಿಸೂಚನೆ ರದ್ದುಪಡಿಸಬೇಕು. ಈ ಅರ್ಜಿ ಇತ್ಯರ್ಥವಾಗುವವರೆಗೆ ಬಿಬಿಎಂಪಿ ವಾರ್ಡ್‌ಗಳಿಗೆ ಮೀಸಲು ಪಟ್ಟಿ ಅಂತಿಮಗೊಳಿಸುವುದಕ್ಕೆ ತಡೆಯಾಜ್ಞೆ ನೀಡಬೇಕು" ಎಂದು ಮನವಿ ಮಾಡಿದರು.

ಮೊದಲ ವಿಚಾರಣೆ ನಡೆಸುವಾಗಲೇ ಮಧ್ಯಂತರ ಆದೇಶ ನೀಡಲಾಗುವುದಿಲ್ಲ. ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ವಾದ ಆಲಿಸಿದ ಬಳಿಕವೇ ಮಧ್ಯಂತರ ಆದೇಶದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್