ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ| ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್‌ ಸೂಚನೆ

  • ಸುದೀರ್ಘ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠ
  • ಈದ್ಗಾ ಮೈದಾನದಲ್ಲಿ ಪೊಲೀಸ್ ಬಿಗಿ ಭದ್ರತೆ; 1500 ಪೊಲೀಸರ ನಿಯೋಜನೆ

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಿಕೊಳ್ಳಲು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಮಂಗಳವಾರ ಸೂಚನೆ ನೀಡಿದೆ. ಪೀಠದ ಈ ಸೂಚನೆಯ ಹಿನ್ನೆಲೆಯಲ್ಲಿ ಆ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಡೆದಿದ್ದ ತಯಾರಿಗಳಿಗೆ ಒಂದು ದಿನ ಮುನ್ನವೇ ತಡೆ ಬಿದ್ದಂತಾಗಿದೆ.

ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ದ್ವಿಸದಸ್ಯ ಪೀಠವು ನೀಡಿದ ತೀರ್ಪು ಪ್ರಶ್ನಿಸಿ ವಕ್ಫ್ ಮಂಡಳಿ ಸಲ್ಲಿಸಿದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಿತ್ತು.

Eedina App

ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಒಪ್ಪಿಕೊಂಡಿದ್ದ ವಕ್ಫ್ ಮಂಡಳಿಯು ದ್ವಿಸದಸ್ಯ ಪೀಠದ ಆದೇಶವನ್ನು ಮಾತ್ರ ಆಕ್ಷೇಪಿಸಿ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ ಮಂಡಳಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಮನವಿ ಸಲ್ಲಿಸಿದ್ದರು.

ಕರ್ನಾಟಕ ವಕ್ಫ್‌ ಮಂಡಳಿ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಅಭಯ್‌ ಎಸ್‌ ಓಕಾ ಹಾಗೂ ಎಂ ಎಂ ಸುಂದರೇಶ್ ಅವರನ್ನು ಒಳಗೊಂಡ ಪೀಠವು ಈ ಆದೇಶ ಹೊರಡಿಸಿತು. 

AV Eye Hospital ad

ಇದಕ್ಕೂ ಮುನ್ನ ಪ್ರಕರಣದ ವಿಚಾರಣೆ ನಡೆಸಿದ ಹೇಮಂತ್‌ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು ಸಹಮತಕ್ಕೆ ಬರಲಿಲ್ಲ. ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ಶಿಫಾರಸು ಮಾಡಿತು. ಬಳಿಕ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್‌ ಅವರು ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿಸದಸ್ಯ ಪೀಠ ರಚಿಸಿದರು. 

ಕರ್ನಾಟಕ ವಕ್ಫ್‌ ಮಂಡಳಿ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿ, "ಈದ್ಗಾ ಮೈದಾನ ಮುಸ್ಲಿಮರಿಗೆ ಸೇರಿದ್ದು. ಇದೀಗ 200 ವರ್ಷಗಳ ಹಳೆಯ ಸಂಪ್ರದಾಯವನ್ನು ಬದಲಿಸುವುದು ಏಕೆ? ಈದ್ಗಾ ಮೈದಾನ ವಕ್ಫ್‌ ಮಂಡಳಿಯ ಆಸ್ತಿ. ರಾಜ್ಯ ಸರ್ಕಾರ ಇದೀಗ ಮಾಲೀಕತ್ವದ ಬಗ್ಗೆ ಪ್ರಶ್ನೆ ಮಾಡಿದೆ. ಗಣೇಶ ಉತ್ಸವಕ್ಕೆ ಅವಕಾಶ ನೀಡುವುದು ನಿಯಮಬಾಹಿರ" ಎಂದು ವಾದಿಸಿದರು. 

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಮುಕುಲ್‌ ರೋಹಟಗಿ ವಾದ ಮಂಡಿಸಿ, "ಚಾಮರಾಜಪೇಟೆ ಮೈದಾನ ಜಾಗ ರಾಜ್ಯ ಸರ್ಕಾರಕ್ಕೆ ಸೇರಿದ್ದು. ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಕೆಯಾಗಿದ್ದು ತಡೆಯಾಜ್ಞೆ ಅರ್ಜಿ. ಮಾಲೀಕತ್ವ ನಿರ್ಧರಿಸುವ ಅರ್ಜಿಯಲ್ಲ" ಎಂದು ಸಮರ್ಥಿಸಿಕೊಂಡರು.

ಈದ್ಗಾ ಮೈದಾನದ ಜಾಗ ಕಂದಾಯ ಇಲಾಖೆಗೆ ಸೇರಿದ್ದು ಎಂಬ ಜಂಟಿ ಆಯುಕ್ತರ ಆದೇಶ ಪ್ರಶ್ನಿಸಿ ವಕ್ಫ್ ಮಂಡಳಿ ಹೈಕೋರ್ಟ್ ಮೊರೆ ಹೋಗಿತ್ತು. ಕಳೆದ ಗುರುವಾರ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ ಅವರ ಏಕ ಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತ್ತು. "ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು. ವರ್ಷದಲ್ಲಿ ಎರಡು ಬಾರಿ ಮಾತ್ರ ಪ್ರಾರ್ಥನೆಗೆ ಅವಕಾಶ ನೀಡಬಹುದು. ಉಳಿದಂತೆ ಆಟದ ಮೈದಾನವಾಗಿ ಬಳಸಬಹುದು" ಎಂದು ಸ್ಪಷ್ಟಪಡಿಸಿತ್ತು. ಈ ಮಧ್ಯಂತರ ಆದೇಶದ ಪ್ರಕಾರ ಗಣೇಶೋತ್ಸವಕ್ಕೆ ಅವಕಾಶ ಇಲ್ಲ ಎನ್ನುವುದು ಸ್ಪಷ್ಟವಾಗಿತ್ತು. ಇದನ್ನು ಪ್ರಶ್ನಿಸಿ ಶುಕ್ರವಾರ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಹೈಕೋರ್ಟ್‌ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಆಗಸ್ಟ್‌ 26ರಂದು ವಿಚಾರಣೆ ನಡೆಸಿ ಏಕ ಸದಸ್ಯ ಪೀಠದ ಆದೇಶವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡೇ ಒಂದು ಅಂಶವನ್ನು ಬದಲಾಯಿಸಿತ್ತು. ಈದ್ಗಾ ಮೈದಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟದ್ದು ಎಂದು ಆದೇಶ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ| ವಾಲ್ಮೀಕಿ ಶ್ರೀ ಅಹೋರಾತ್ರಿ ಧರಣಿ 202ನೇ ದಿನಕ್ಕೆ; 'ರಾಜಧಾನಿ ಚಲೋ' ನಿರ್ಧಾರ

ಬೇರೆಡೆ ಗಣೇಶೋತ್ಸವಕ್ಕೆ ಅವಕಾಶ 

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್ ಈದ್ಗಾ ಮೈದಾನದಲ್ಲಿ ಎರಡು ದಿನಗಳ ಕಾಲ ಯಥಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಿದ್ದು, ಬೇರೆಡೆಗೆ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ. ಈ ನಡುವೆ ಈಗಾಗಲೇ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

1500 ಪೊಲೀಸರ ನಿಯೋಜನೆ

ಚಾಮರಾಜಪೇಟೆ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 3 ಡಿಸಿಪಿ, 21 ಎಸಿಪಿ, 47 ಇನ್‌ಸ್ಪೆಕ್ಟರ್‌ಗಳು, 130 ಪಿಎಸ್ಐ, 126 ಎಎಸ್ಐ, 900 ಕಾನ್ಸ್‌ಟೇಬಲ್‌ಗಳು, 120 ಆರ್‌ಎ ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಿಮಗೆ ಏನು ಅನ್ನಿಸ್ತು?
1 ವೋಟ್
eedina app