ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳ ರಸ್ತೆ ದುರಸ್ತಿ ಕೆಲಸ ಆದಷ್ಟು ಬೇಗ ಪೂರ್ತಿಗೊಳಿಸಲು ಅಧಿಕಾರಿಗಳಿಗೆ ಎಚ್ಚರಿಕೆ

  • 505.29 ಕಿ.ಮೀ ರಸ್ತೆ ಪುನಶ್ಚೇತನ ಕೆಲಸ ಮುಗಿಸಲು ಅಧಿಕಾರಿಗಳಿಗೆ ಸೂಚನೆ
  • ರಸ್ತೆ ದುರಸ್ತಿ ವಿಳಂಬವಾದರೆ ಸಂಭದಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ

ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ನೀರಿನ ಪೈಪ್ ಲೈನ್ ಹಾಗೂ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿರುವ ರಸ್ತೆಗಳನ್ನು ಶೀಘ್ರದಲ್ಲಿ ದುರಸ್ತಿಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಎಚ್ಚರಿಸಿದ್ದಾರೆ.

ರಸ್ತೆ ದುರಸ್ತಿ ಮತ್ತು ಪುನಶ್ಚೇತನ ಕಾರ್ಯಕ್ಕೆ ಸಂಬಂಧಿಸಿದಂತೆ ಬುಧವಾರ ನಡೆದ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, "ನಗರದಲ್ಲಿ 110 ಹಳ್ಳಿಗಳ ರಸ್ತೆ ಪುನಶ್ಚೇತನ ಕಾರ್ಯಕ್ಕಾಗಿ ರಾಜ್ಯ ಸರ್ಕಾರದಿಂದ 1,078 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮೇ ತಿಂಗಳ ಅಂತ್ಯದೊಳಗೆ ರಸ್ತೆ ಪುನಶ್ಚೇತನ ಕಾರ್ಯವನ್ನು ಪೂರ್ಣಗೊಳಿಸಿ ವಾಹನ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಆದ್ದರಿಂದ ಎಲ್ಲಾ ಅಧಿಕಾರಿಗಳು ರಸ್ತೆಗಳ ಪುನಶ್ಚೇತನ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಮುಂದಾಗಿ" ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. 

ಅಲ್ಲದೆ, "ನಗರದಲ್ಲಿ ರಸ್ತೆಗಳು ಹಾಳಾಗಿವೆ ಎಂಬ ದೂರುಗಳು ಬರಬಾರದು. ರಸ್ತೆ ಪುನಶ್ಚೇತನ ಕಾರ್ಯವು ಗುಣಮಟ್ಟದ ರೀತಿಯಲ್ಲಿರಬೇಕು. ಈ ಪೈಕಿ ಸಂಬಂಧಪಟ್ಟ ಅಧಿಕಾರಿಗಳು ನಿಗಾವಹಿಸಬೇಕು. ಮುಖ್ಯ ರಸ್ತೆ ಮತ್ತು ಉಪರಸ್ತೆಗಳಿಗೆ ಸಂಬಂಧಿಸಿದಂತೆ ಕೂಡಲೇ ರಸ್ತೆ ಪುನಶ್ಚೇತನ ಕಾರ್ಯ ಆಗಬೇಕಿದೆ" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಇದನ್ನು ಓದಿದ್ದೀರಾ ? ಸಮಾನ ವೇತನಕ್ಕೆ ಆಗ್ರಹ| ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸಂಘದಿಂದ ಬೃಹತ್ ಪ್ರತಿಭಟನೆ

ಒಟ್ಟು 794.98 ಕಿ.ಮೀ ಉದ್ದದ ರಸ್ತೆಯನ್ನು 74 ಪ್ಯಾಕೇಜ್ ಗಳಲ್ಲಿ ಪುನಶ್ಚೇತನ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಅದರಲ್ಲಿ 289.69 ಕಿ.ಮೀ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, 505.29 ಕಿ.ಮೀ ರಸ್ತೆ ಕೆಲಸವಾಗಬೇಕಾಗಿದೆ. ಮೇ ಅಂತ್ಯದೊಳಗೆ ಎಲ್ಲ ರಸ್ತೆಗಳ ದುರಸ್ತಿ ಕಾರ್ಯ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಸಭೆಯಲ್ಲಿ ಎಲ್ಲಾ ವಲಯ ಮುಖ್ಯ ಅಭಿಯಂತರರು, ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತರರು, ವಿಭಾಗೀಯ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180