ಶ್ರೇಷ್ಠತೆಯ ವ್ಯಸನ ದೇಶ ಒಡೆಯುತ್ತಿದೆ; ನಟ ಸುದೀಪ್‌ ಬೆಂಬಲಕ್ಕೆ ನಿಂತ ಎಚ್‌ ಡಿ ಕುಮಾರಸ್ವಾಮಿ

Hindi Imposition
  • ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸ್ಯಾಂಡಲ್‌ವುಡ್
  • ನಟ ಸುದೀಪ್‌-ಅಜಯ್‌ ದೇವಗನ್ ಟ್ವಿಟರ್‌ ಸಮರ

"ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟುಜಾಡ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ" ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಹಿಂದಿ ರಾಷ್ಟ್ರಭಾಷೆ ಹೌದೋ ಅಲ್ಲವೋ ಎಂಬ ಕುರಿತು ಹಿಂದಿ ಚಿತ್ರನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಸುದೀಪ್ ನಡುವೆ ಟ್ವಿಟರ್‌ನಲ್ಲಿ ದೊಡ್ಡ ಚರ್ಚೆಯೇ ಶುರುವಾಗಿತ್ತು. ಈ ವೇಳೆ ನಟ ಸುದೀಪ್‌ "ದೇಶಕ್ಕೆ ಯಾವುದೇ ಭಾಷೆ, ರಾಷ್ಟ್ರಭಾಷೆ ಅಲ್ಲ" ಎಂದು ಹೇಳಿದ್ದರು. ಸುದೀಪ್ ಅಭಿಪ್ರಾಯಕ್ಕೆ ಕನ್ನಡದ ಬಹುತೇಕ ನಟ ನಟಿಯರು ಸಮ್ಮತಿ ಸೂಚಿಸಿ ಟ್ವೀಟ್‌ ಮಾಡಿದ್ದರು. ಈ ವಿಚಾರ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿದೆ.

ಈ ವಿಚಾರವಾಗಿ ನಟ ಸುದೀಪ್‌ ಬೆಂಬಲಿಸಿ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, "ಚಿತ್ರನಟ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ" ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, "ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ.

ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ?" ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧವೂ ಕಿಡಿಕಾರಿರುವ ಕುಮಾರಸ್ವಾಮಿ, "ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ 'ಹಿಂದಿ ರಾಜಕೀಯ ಪಕ್ಷಗಳು' ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳ ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ.

ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರ್ಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ" ಎಂದು ಕಿಡಿಕಾರಿದ್ದಾರೆ.

ಅಲ್ಲದೆ ಮತ್ತೊಂದು ಟ್ವೀಟ್‌ನಲ್ಲಿ, "ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ 'ಫೂಲ್ ಔರ್ ಕಾಂಟೆ' ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು" ಎಂದು ಕಿವಿಮಾತು ಹೇಳಿದ್ದಾರೆ.

ನಿಮಗೆ ಏನು ಅನ್ನಿಸ್ತು?
3 ವೋಟ್