ಗದಗ | ಪರಿಶಿಷ್ಟರಿಗೆ ಉದ್ಯೋಗ–ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹ  

  • "ಎಸ್‌ಸಿಗೆ ಶೇ.15 ರಿಂದ ಶೇ.17ಕ್ಕೆ ಮತ್ತು ಎಸ್‌ಟಿಗೆ ಶೇ.3 ರಿಂದ ಶೇ.7ಕ್ಕೆ ಮೀಸಲಾತಿ ಹೆಚ್ಚಿಸಬೇಕು"
  • ನಿವೃತ್ತ ನ್ಯಾ. ಎಚ್.ಎನ್ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಒತ್ತಾಯ

ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ (ದಸಂಸ) ಕಾರ್ಯಕರ್ತರು ಗದಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. 

"ಕರ್ನಾಟಕದಲ್ಲಿ 1958ರಲ್ಲಿ ಸಂವಿಧಾನದ ಪರಿಚ್ಛೇದ 15(4) ಮತ್ತು 16(4)ರ ಅಡಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ.15ರಷ್ಟು ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.3ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. 2011ರ ಜನಗಣತಿಯಲ್ಲಿ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜನಸಂಖ್ಯೆಗೆ ಅನುಗುಣವಾಗಿ ಶೇ. 17.15 ಮತ್ತು ಶೇ.7ಗೆ ಏರಿಕೆ ಏರಿಕೆ ಮಾಡಬೇಕು" ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

"ಜನಸಂಖ್ಯೆಗೆ ಅನುಗಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕೆಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ಅವರ ಆಯೋಗವು ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ಆ ವರದಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಕಳೆದ 208ಕ್ಕೂ ಹೆಚ್ಚು ದಿನಗಳಿಂದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ. ಆದರೂ ಸರ್ಕಾರ ಸ್ಪಂದಿಸುತ್ತಿಲ್ಲ" ಎಂದು ಆರೋಪಿಸಿದ್ದಾರೆ.

ಮೀಸಲಾತಿ ಪ್ರಮಾಣ ಹೆಚ್ಚಳ ಕುರಿತು ವಿಧಾನಸಭೆ, ವಿಧಾನ ಪರಿಷತ್ ಕಲಾಪಗಳಲ್ಲಿಯೂ ಚರ್ಚೆಗೆ ಬಂದಿದೆ. ಆದರೆ, ಈವರೆಗೆ ಸಂವಿಧಾನಾತ್ಮಕವಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ಆದೇಶ ಹೊರಡಿಸಿಲ್ಲ" ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಮಳೆಯಿಂದ ಕುಸಿದ ಮನೆ ಗೋಡೆ: ಪರಿಹಾರದ ನಿರೀಕ್ಷೆಯಲ್ಲಿ ಬಡ ಕುಟುಂಬ

"ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿ ಮಾಡಿ ಆಯೋಗದ ಶಿಫಾರಸ್ಸಿನಂತೆ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಯವರಿಗೆ ಶೇ.15 ರಿಂದ ಶೇ.17ಕ್ಕೆ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.3 ರಿಂದ ಶೇ.7ಕ್ಕೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳು ಗಮನ ಹರಿಸಬೇಕು" ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಮುಖಂಡ ಗುರುನಾಥ ಕೆಂಗಾರಕರ್, ದತ್ತು ಜೋಗಣ್ಣನವರ, ಆನಂದ ಕಟ್ಟಿಮನಿ, ತಡಸಿ  ಪ್ರಶಾಂತ್, ಲಕ್ಷ್ಮಣ ಮ್ಯಾಗೇರಿ, ಯೋಗೇಶ್ ತಳವಾರ, ಕೂಮಾರ ಜೋಗಣ್ಣನವರ, ಅನಿಲ್ ಜೋಗಣ್ಣನವರ, ಆನಂದ ದೊಡ್ಡಮನಿ ಮತ್ತಿತರು ಇದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್