ಕೋಲಾರ | ದಲಿತ ಬಾಲಕನಿಗೆ ದಂಡ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಕ್ಕಳ ರಕ್ಷಣಾ ಆಯೋಗ

  • ಶುಕ್ರವಾರ ಉಳ್ಳೇರಹಳ್ಳಿ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ
  • ದೇವರ ಗುಜ್ಜಕೋಲು ಮುಟ್ಟಿದ್ದಕ್ಕೆ ದಂಡ ವಿಧಿಸಿದ್ದ ಪ್ರಕರಣ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಉಳ್ಳೇರಹಳ್ಳಿ ಗ್ರಾಮದಲ್ಲಿ ದೇವರ ಗುಜ್ಜಕೋಲು ಮುಟ್ಟಿದ ಕಾರಣಕ್ಕೆ ದಲಿತ ಬಾಲಕನ ಮೇಲೆ ಗ್ರಾಮದ ಮುಖಂಡರು ಹಲ್ಲೆ ನಡೆಸಿ, ಕುಟುಂಬಕ್ಕೆ ದಂಡ ವಿಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. 

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕನ್ನಡ ಪತ್ರಿಕೆಯೊಂದರ ವರದಿ ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಉಳ್ಳೇರಹಳ್ಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಸೆಪ್ಟೆಂಬರ್ 23 (ನಾಳೆ)ರಂದು ಬೆಳಿಗ್ಗೆ ಭೇಟಿ ನೀಡಲಿದೆ.  

Image

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕೋಲಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪತ್ರ ಬರೆದಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಕೋಲಾರ | ದೇವರ ವಿಗ್ರಹ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ 60 ಸಾವಿರ ರೂ. ದಂಡ

ಭೇಟಿ ಸಂದರ್ಭದಲ್ಲಿ ಘಟನೆ ಸಂಬಂಧ ಚರ್ಚಿಸಲು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರೆ ಅಧಿಕಾರಿಗಳ ಜತೆಗೆ ಸಭೆ ಆಯೋಜನೆ ಮಾಡಲು ಸಿದ್ಧತೆ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಆಯೋಗದ ಅಧ್ಯಕ್ಷರು ಪತ್ರ ಬರೆದು ನಿರ್ದೇಶನ ನೀಡಿದ್ದಾರೆ. 

ನಿಮಗೆ ಏನು ಅನ್ನಿಸ್ತು?
0 ವೋಟ್