
- ಮಹಾರಾಷ್ಟ್ರದ ಕನ್ನಡ ಶಾಲೆ ಅಭಿವೃದ್ಧಿಗೆ ವಿಶೇಷ ಅನುದಾನ
- ಏಕೀಕರಣ ಹೋರಾಟಗಾರ ಮಹಾರಾಷ್ಟ್ರದ ಕನ್ನಡಿಗರಿಗೆ ಪಿಂಚಣಿ
ರಾಜ್ಯ- ರಾಜ್ಯಗಳ ನಡುವೆ ವ್ಯಾಜ್ಯ ಹಚ್ಚಿಹಾಕುವ ಕೆಲಸವನ್ನು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಮಂಗಳವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, “ಗಡಿ ಅಭಿವೃದ್ಧಿ ಪ್ರಾಧಿಕಾರವು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆನ್ನುವ ತೀರ್ಮಾನ ಮಾಡಲಾಗಿದೆ” ಎಂದರು.
“ಏಕೀಕರಣ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ದಾಖಲೆಗಳನ್ನು ತರಿಸಿ ಅವರಿಗೂ ಪಿಂಚಣಿ ನೀಡುವ ಕೆಲಸವನ್ನು ಕಾರ್ಯಗತ ಮಾಡಲಾಗುವುದು” ಎಂದರು.
ಕನ್ನಡಿಗರ ಹಿತರಕ್ಷಣೆ ನಮ್ಮ ಕರ್ತವ್ಯ
“ಎರಡು ರಾಜ್ಯಗಳ ನಡುವೆ ಸೌಹಾರ್ದತೆ ಇರುವಾಗ, ಎಲ್ಲ ಭಾಷಿಕರನ್ನು ಒಂದೇ ರೀತಿಯಲ್ಲಿ ನೋಡಿಕೊಳ್ಳುವಾಗ, ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಇರುವ ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಅದನ್ನು ನಾವು ಮಾಡುತ್ತೇವೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ | ಸುಪ್ರೀಂ ಕೋರ್ಟ್ ವಿಚಾರಣೆ ಸನ್ನಿಹಿತ; ಮೋದಿ- ಶಾ ಭೇಟಿಗೆ ಶಿಂಧೆ ನಿಯೋಗ ಸಜ್ಜು
ಜತ್ ತಾಲ್ಲೂಕು ಕರ್ನಾಟಕಕ್ಕೆ ಸೇರ್ಪಡೆ
“ಜತ್ ತಾಲ್ಲೂಕಿನಲ್ಲಿ ತೀವ್ರ ಬರಗಾಲವಿದ್ದು ಕುಡಿಯುವ ನೀರಿನ ಸಮಸ್ಯೆ ಇತ್ತು. ನಾವು ನೀರು ಕೊಟ್ಟು ಸಹಾಯ ಮಾಡಬೇಕೆಂದು ಯೋಜನೆಗಳನ್ನು ರೂಪಿಸಿದ್ದೇವೆ. ಜತ್ ತಾಲ್ಲೂಕು ಕರ್ನಾಟಕಕ್ಕೆ ಸೇರಬೇಕೆಂದು ಎಲ್ಲ ಗ್ರಾಮ ಪಂಚಾಯಿತಿಗಳು ನಿರ್ಧರಿಸಿದ್ದವು. ನಾವು ಅದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ” ಎಂದರು.