ಶಿವಮೊಗ್ಗ ಗಲಾಟೆ : ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ ನಾರಾಯಣಗೌಡ

narayana gowda
  • ನಿಷೇಧಾಜ್ಞೆ ಹಿನ್ನೆಲೆ‌: ಆ. 16ರಂದು ನಡೆಯಬೇಕಿದ್ದ ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ 
  • ಶಿವಮೊಗ್ಗ, ಭದ್ರಾವತಿಯ ಎಲ್ಲ ಶಾಲಾ ಕಾಲೇಜುಗಳಿಗೆ ಮಂಗಳವಾರದಂದು ರಜೆ ಘೋಷಣೆ

ಶಿವಮೊಗ್ಗ ನಗರದಲ್ಲಿ ಸೋಮವಾರ ಟಿಪ್ಪು ಸುಲ್ತಾನ್- ವಿ ಡಿ ಸಾವರ್ಕರ್ ಫ್ಲೆಕ್ಸ್‌ಗೆ ಸಂಬಂಧಿಸಿ ನಡೆದ ಗಲಾಟೆ ಪ್ರಕರಣದ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೇ, ಮಂಗಳವಾರ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗ ಜಿಲ್ಲೆ ಶಾಂತಿಪ್ರಿಯ ಜಿಲ್ಲೆಯಾಗಿದ್ದು, ಜನರು ಶಾಂತಿ ಕಾಪಾಡುವಂತೆ ಜನರಲ್ಲಿ ಸಚಿವರು ಮನವಿ ಮಾಡಿದರು.

ಮೆಗ್ಗಾನ್ ಆಸ್ಪತ್ರೆಗೆ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ನೀಡಿ ವೈದ್ಯರಿಂದ ಮಾಹಿತಿ‌ ಪಡೆದು, ಗಾಯಾಳು ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದರು. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ  ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಆಗಸ್ಟ್ 16ರ ಮಂಗಳವಾರ ರಜೆ ಘೋಷಿಸಲಾಗಿದೆ.

ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ 

ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್ ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.‌ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.  

ನಿಮಗೆ ಏನು ಅನ್ನಿಸ್ತು?
0 ವೋಟ್