
- ʼಶೇ.10ರಷ್ಟು ಮೀಸಲಾತಿ ನೀಡುವ ಸಂವಿಧಾನದ ತಿದ್ದುಪಡಿ ಒಪ್ಪಲು ಸಾಧ್ಯವಿಲ್ಲʼ
- ʼಪುನರ್ ಪರಿಶೀಲಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಕಾರ್ಜುನ ಖರ್ಗೆ ತಿಳಿಸಿದ್ದಾರೆʼ
"ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ (ಇಡಬ್ಲ್ಯುಎಸ್) ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವೇ ಇಲ್ಲ. ಹೀಗಾಗಿ ಅವರಿಗೆ ಶೇ.10ರಷ್ಟು ಮೀಸಲಾತಿ ನೀಡುವ ಸಂವಿಧಾನದ ತಿದ್ದುಪಡಿ ಒಪ್ಪಲು ಸಾಧ್ಯವಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೋಮವಾರ ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ ‘ಇಡಬ್ಲ್ಯುಎಸ್ ಮೀಸಲಾತಿ ಸಂಬಂಧ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿತ್ತು. ಆದರೆ, ಈಗ ಅದನ್ನು ಪುನರ್ ಪರಿಶೀಲಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಂವಿಧಾನದ ತಿದ್ದುಪಡಿಯನ್ನು ಈಗಾಗಲೇ ತಮಿಳುನಾಡು ಸರ್ಕಾರ ತಿರಸ್ಕರಿಸಿದೆ” ಎಂದರು.
ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿ, “ಮೀಸಲಾತಿಗೆ ಸಂಸತ್ನಲ್ಲಿ ನಾವೆಲ್ಲರೂ ಒಮ್ಮತದಿಂದ ಒಪ್ಪಿಗೆ ನೀಡಿದ್ದೆವು. ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಅದನ್ನು ಸ್ವಾಗತಿಸುವೆ” ಎಂದು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದರು.
ಮೇಲ್ವರ್ಗದ ಆರ್ಥಿಕ ದುರ್ಬಲ ವರ್ಗದವರಿಗೆ (ಇಡಬ್ಲ್ಯುಎಸ್) ಆರ್ಥಿಕ ಮೀಸಲಾತಿ ನೀಡುವುದನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ನ ತೀರ್ಪಿನ ಬಗ್ಗೆ ಕಾಂಗ್ರೆಸ್ ತನ್ನ ನಿಲುವಿನ ಮರುಚಿಂತನೆಗೆ ಮುಂದಾಗಿದೆ. ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸಿದ್ದ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಮರುಪರಿಶೀಲಿಸುತ್ತಿದೆ.