
- ಅನ್ವರ್ ಸಾದತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ
- ಎಸ್ಡಿಪಿಐ-ಪಿಎಫ್ಐ ಜೊತೆ ಸಂಪರ್ಕ ಹೊಂದಿಲ್ಲ
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಚೇರಿಯ ಮೇಲೆ ಮತ್ತು ಕಚೇರಿಯನ್ನು ಸೀಜ್ (ಮೊಹರು) ಮಾಡಿದ್ದ ಪ್ರಕರಣದಲ್ಲಿ ದಕ್ಷಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಇತ್ತೀಚೆಗೆ, ಎಸ್ಡಿಪಿಐ ಕಚೇರಿಯ ಮೇಲೆ ಪೊಲೀಸರು ಸಂಘಟನೆಯ ಕಚೇರಿ ಮತ್ತು ಸ್ವತ್ತುಗಳಿಗೆ ಮೊಹರು ಹಾಕಿದೆ. ಅದನ್ನು ತೆರವುಗೊಳಿಸುವಂತೆ ದಕ್ಷಿಣ ಕನ್ನಡ ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಬುಧವಾರ ನೋಟಿಸ್ ಹೊರಡಿಸಿದೆ.
"ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಸ್ಡಿಪಿಐಗೆ ಸೇರಿದ 200ಕ್ಕೂ ಅಧಿಕ ಚುನಾಯಿತ ಜನಪ್ರತಿನಿಧಿಗಳಿದ್ದಾರೆ. ಅವರಿಗೆ ರಾಜಕೀಯ ಚಟುವಟಿಕೆ ನಡೆಸಲು ಕಚೇರಿಯ ಅಗತ್ಯವಿದೆ. ಆದ್ದರಿಂದ, ಕಚೇರಿಗಳಿಗೆ ಹಾಕಲಾಗಿರುವ ಮೊಹರನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು" ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್ ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಕೊಡಗು | ಲೋಕಾಯುಕ್ತ ದಾಳಿ; ಸಾಕ್ಷಿ ಸಮೇತ ಸಿಕ್ಕಿಬಿದ್ದ ಪ್ರಥಮ ದರ್ಜೆ ಸಹಾಯಕಿ
"ಅಧಿಕಾರಿಗಳು ಸೀಲ್ ಹಾಕಿರುವ ಕಚೇರಿಗಳು ಬಾಡಿಗೆ ಸ್ಥಳಗಳಾಗಿದ್ದು, ದುರುದ್ದೇಶದಿಂದ ಅವುಗಳನ್ನು ಜಪ್ತಿ ಮಾಡಲಾಗಿದೆ. ಮಂಗಳೂರಿನ ಬೀಗರೆಯಲ್ಲಿರುವ ಎಸ್ಡಿಪಿಐ ಮಾಹಿತಿ ಮತ್ತು ಸೇವಾ ಕೇಂದ್ರ, ಬಂಟ್ವಾಳ, ಅದ್ದೂರ್, ಕುದ್ರೋಳಿ, ಪಾವೂರು, ಸುರತ್ಕಲ್ನ ಚೊಕ್ಕಬೆಟ್ಟು, ಪರಂಗಿಪೇಟೆ, ಕಾಟಿಪಳ್ಳ, ಬಂಟ್ವಾಳದ ಮಂಚಿ, ಮಂಗಳೂರಿನ ನೆಲ್ಲಿಕಾಯಿ ರಸ್ತೆ ಹಾಗೂ ಉಲ್ಲಾಳಯಲ್ಲಿರುವ ಕಚೇರಿಗಳ ಮೇಲೆ ಅಕ್ರಮವಾಗಿ ದಾಳಿ ನಡೆಸಿ, ಅವುಗಳಿಗೆ ಸೀಲ್ ಹಾಕಲಾಗಿದೆ" ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.

"ಪ್ರಜಾಪ್ರತಿನಿಧಿ ಕಾಯ್ದೆ-1951ರ ಅಡಿ ನೋಂದಾಯಿತ ರಾಜಕೀಯ ಪಕ್ಷವಾಗಿರುವ ಎಸ್ಡಿಪಿಐ, ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತಿದೆ. ಪಕ್ಷವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜತೆ ಯಾವುದೇ ಸಂಪರ್ಕ ಹೊಂದಿಲ್ಲ. ಪಿಎಫ್ಐ ಮತ್ತದರ ಸಂಸ್ಥೆಗಳನ್ನು ನಿಷೇಧಿಸುವ ಸಂದರ್ಭದಲ್ಲಿ ಗೃಹ ಸಚಿವಾಲಯ ಎಸ್ಡಿಪಿಐ ಹೆಸರು ಸೇರಿಸಿಲ್ಲ. ಆದರೂ ಪ್ರತಿವಾದಿಗಳು ಪಕ್ಷಕ್ಕೆ ಸೇರಿದ ಸ್ಥಳಗಳ ಮೇಲೆ ಅಕ್ರಮವಾಗಿ ದಾಳಿ ನಡೆಸಿ, ಜಪ್ತಿ ಮಾಡಿದ್ದಾರೆ" ಎಂದು ಅರ್ಜಿದಾರರು ದೂರಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮಂಗಳೂರು ನಗರ ಪೊಲೀಸ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ನೀಡುವಂತೆ ಆದೇಶಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿದೆ.