
- ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
- ‘ಸರ್ಕಾರ ದಲಿತರಿಗೆ ಮೋಸ ಮಾಡುತ್ತಲೆ ಬಂದಿದೆ’
ಹಲವಾರು ವರ್ಷಗಳಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಮೀಸಲಿಟ್ಟ ಭೂಮಿಯನ್ನು ದಲಿತರಿಗೆ ವಿತರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. 2017ರಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ ಜಗದೀಶ್ ಭೂ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರೂ ಇದುವರೆಗೂ ಭೂಮಿ ಮಂಜೂರು ಮಾಡಿಲ್ಲ. ದಲಿತರಿಗೆ ಭೂಮಿ ಕೊಡಲು ಸರ್ಕಾರಕ್ಕಿನ್ನೂ ಸಮಯ ಸಿಕ್ಕಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ದಸಂಸ) ಜಿಲ್ಲಾ ಪ್ರಧಾನ ಸಂಚಾಲಕ ಜಗದೀಶ್ ಪಾಂಡೇಶ್ವರ ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ದಸಂಸ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ. ಪ್ರತಿಭಟನೆಯಲ್ಲಿ ಜಗದೇಶ್ ಮಾತನಾಡಿ, "ಭೂಮಿ, ವಸತಿ, ಶಿಕ್ಷಣ ಹಾಗೂ ದಲಿತರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯಗಳನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಜಾರಿಗೊಳಿಸಬೇಕು" ಎಂದು ಒತ್ತಾಯಿಸಿದರು.
“ಇದುವರೆಗೂ ಸರ್ಕಾರ ದಲಿತರಿಗೆ ಮೋಸ ಮಾಡುತ್ತಲೆ ಬಂದಿದೆ. ಮುಂದಿನ ಚುನಾವಣೆ ಹತ್ತಿರದಲ್ಲಿಯೇ ಇದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಯಾರಿಗೆ ಮತ ಹಾಕಬೇಕು ಎಂಬುದನ್ನು ನಿರ್ಧಾರ ಮಾಡುತ್ತೇವೆ” ಎಂದು ಜಗದೀಶ್ ಪಾಂಡೇಶ್ವರ ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಅನರ್ಹರಿಗೆ ಸಿಗುತ್ತಿರುವ ಸೌಲಭ್ಯ; ಅರ್ಹ ಕಾರ್ಮಿಕರಿಗೆ ಅನ್ಯಾಯ: ಆರೋಪ
ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಸೇಸಪ್ಪ ನೆಕ್ಕಿಲು ಮಾತನಾಡಿ, ”ಬಿಜೆಪಿ ಸರ್ಕಾರ ಬಂದಾಗಿನಿಂದ ದಲಿತರಿಗೆ ಒಂದಲ್ಲ ಒಂದು ರೀತಿಯಲ್ಲಿ ಅನ್ಯಾಯವಾಗುತ್ತಿದೆ. ದಲಿತರ ಮೇಲೆ ನಿರಂತರ ದೌರ್ಜನ್ಯವಾಗುತ್ತಿದೆ” ಎಂದು ಕಿಡಿಕಾರಿದರು.

ಪ್ರತಿಭಟನೆ ನಂತರ ದಸಂಸ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ದಸಂಸ(ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಬಿ.ಕೆ. ವಸಂತ್, ಜಿಲ್ಲಾ ಸಂಘಟನಾ ಸಂಚಾಲಕ ನಾಗೇಶ್ ಮುಲ್ಲಿಕಾಡು, ಕಡಬ ತಾಲೂಕು ಸಂಚಾಲಕ ವಸಂತ ಕುಬಲಾಡಿ, ಮೂಡಬಿದಿರೆ ತಾಲೂಕು ಸಂಚಾಲಕ ಹರೀಶ್, ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗಿಯಾದಿದ್ದ ಸುಮಲತಾ ಉಪಸ್ಥಿತರಿದ್ದರು.