ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಸಿಬಿಐಗೆ ಹೈಕೋರ್ಟ್‌ ನೋಟಿಸ್‌

  • ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ಡಿಕೆಶಿ ಅರ್ಜಿ
  • ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಆರೋಪ

ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿರುವ ಆರೋಪ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ಕುರಿತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ.

ಡಿಕೆಶಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. 

ಡಿಕೆಶಿರ ಪರ ವಕೀಲರು ವಾದ ಮಂಡಿಸಿ "ಅರ್ಜಿದಾರರು 1989ರಿಂದ ಒಟ್ಟು ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ವಿರುದ್ಧ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಕುರಿತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಾಯಿದೆ ಅಡಿ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರ. ಎಫ್‌ಐಆರ್ ದಾಖಲಿಸುವ ವೇಳೆ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಗಳಲ್ಲಿ ಅನುಸರಿಸಬೇಕಾದ ನಿಯಮ ಪಾಲಿಸಿಲ್ಲ. ಪ್ರಾಥಮಿಕ ತನಿಖೆಯ ಅಂಶಗಳೇನು ಎಂಬುದನ್ನೂ ಎಫ್‌ಐಆರ್‌ನಲ್ಲಿ ವಿವರಿಸಿಲ್ಲ" ಎಂದು ಆಕ್ಷೇಪಿಸಿದರು.

"ಅರ್ಜಿದಾರರು ಕೃಷಿ ಕುಟುಂಬದ ಹಿನ್ನೆಲೆ ಹೊಂದಿದ್ದಾರೆ. ರಿಯಲ್ ಎಸ್ಟೇಟ್, ಶಿಕ್ಷಣ ಕೇತ್ರ ಸೇರಿದಂತೆ ಇತರೆ ವ್ಯವಹಾರಗಳ ಮೂಲಕ ಆದಾಯ ಹೊಂದಿದ್ದಾರೆ. ಡಿಕೆಶಿ ವಿರುದ್ಧ ದುರುದ್ದೇಶಪೂರ್ವಕವಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಎಸಿಬಿ ಕಾಯಿದೆ ಅನುಸಾರ ಸಾರ್ವಜನಿಕ ಸೇವಕರ ವಿರುದ್ಧ ಮಾತ್ರವೇ ತನಿಖೆ ನಡೆಸಬೇಕಿತ್ತು. ಆದರೆ, ಅರ್ಜಿದಾರರ ಕುಟುಂಬದ ಸದಸ್ಯರ ವಿರುದ್ಧವೂ ಸಿಬಿಐ ಪ್ರಕರಣ ದಾಖಲಿಸಿದೆ. ಇದು ಕಾನೂನುಬಾಹಿರ ಕ್ರಮವಾಗಿದ್ದು, ಪ್ರಕರಣ ರದ್ದುಗೊಳಿಸಬೇಕು" ಎಂದು ಕೋರಿದರು. ಇದನ್ನು ಆಲಿಸಿದ ಪೀಠವು ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ.

ಈ ಸುದ್ದಿ ಓದಿದ್ದೀರಾ?: ಫಾಝಿಲ್‌ ಹತ್ಯೆ ಪ್ರಕರಣ | ಪೂರ್ವ ನಿಯೋಜಿತ ಕೃತ್ಯ ಎಂದ ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌

2013ರ ಏಪ್ರಿಲ್‌ 1ರಿಂದ 2018ರ ಏಪ್ರಿಲ್‌ 30ರವರೆಗಿನ ಆದಾಯ ಪರಿಶೀಲನಾ ಅವಧಿಗೂ ಮುನ್ನ ಡಿ ಕೆ ಶಿವಕುಮಾರ್ ಅವರ ಸ್ಥಿರ ಮತ್ತು ಚರಾಸ್ತಿಯ ಒಟ್ಟು ಮೊತ್ತ 33.92 ಕೋಟಿ ರೂಪಾಯಿ ಆಗಿತ್ತು. ಪರಿಶೀಲನಾ ಅವಧಿಯಲ್ಲಿ ಈ ಮೊತ್ತ 128.60 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಆದಾಯ ಹೆಚ್ಚಳಕ್ಕೆ ಶಿವಕುಮಾರ್ ಸೂಕ್ತ ದಾಖಲೆಗಳನ್ನು ಒದಗಿಸಿಲ್ಲ ಎಂಬುದು ಸಿಬಿಐ ಆರೋಪ.

ನಿಮಗೆ ಏನು ಅನ್ನಿಸ್ತು?
0 ವೋಟ್