ದಕ್ಷಿಣಕನ್ನಡ| ಭಯದ ವಾತಾವರಣ ಸೃಷ್ಟಿಸುವ ಸಲುವಾಗಿ ಪ್ರವೀಣ್‌ ಹತ್ಯೆ: ಎನ್‌ಐಎ

  • ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಿರುವ ಎನ್‌ಐಎ
  • ಪ್ರಮುಖ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದೆ.

"ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸುವ ಸಲುವಾಗಿ ಪ್ರವೀಣ್‌ನನ್ನು ಹತ್ಯೆ ಮಾಡಲಾಗಿದೆ" ಎಂದು ತನಿಖಾ ಸಂಸ್ಥೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 

ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ವಶದಲ್ಲಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಜ್ ಅಂಕತಡ್ಕ, ಬಶೀರ್ ಎಂಬುವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಆಗಸ್ಟ್‌ 24ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಸುಳ್ಯ ನ್ಯಾಯಾಲಯ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಮೂವರ ಸಾವು

ಈ ಮೂವರು ಆರೋಪಿಗಳನ್ನು ಆಗಸ್ಟ್‌ 11ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದರು.

ಏನಿದು ಪ್ರಕರಣ?

ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರಿನಿಂದ ಪ್ರವೀಣ್‌ಗೆ ಹೊಡೆದು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್