ಮಂಗಳೂರು | ಎನ್‌ಐಎ ದಾಳಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 32 ಮಂದಿ ವಶಕ್ಕೆ

nia
  • ಬಂದರು ಪ್ರದೇಶದಲ್ಲಿ ಎನ್‌ಐಎ ದಾಳಿ ಖಂಡಿಸಿ ಪ್ರತಿಭಟನೆ
  • ಮಂಗಳೂರಿನಲ್ಲಿ ಮೂವರನ್ನು ವಶಕ್ಕೆ ಪಡೆದಿರುವ ಎನ್‌ಐಎ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಚೇರಿ ಮತ್ತು ಅದರ ಸದಸ್ಯರ ನಿವಾಸಗಳ ಮೇಲಿನ ಎನ್ಐಎ ದಾಳಿ ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ 32 ಮಂದಿಯನ್ನು ಮಂಗಳೂರು ಉತ್ತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎನ್ಐಎ ದಾಳಿಯನ್ನು ವಿರೋಧಿಸಿ ಮಂಗಳೂರಿನಲ್ಲಿ ಹಲವರು "ಎನ್ಐಎ ಗೋಬ್ಯಾಕ್" ಪ್ರತಿಭಟನೆಗೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ 32 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಈ ಕುರಿತು ಈ ದಿನ.ಕಾಮ್ ಜತೆ ಮಾತನಾಡಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, "ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಎನ್‌ಐಎ ದಾಳಿ ನಡೆಸುತ್ತಿದೆ. ಇದನ್ನು ಖಂಡಿಸಿ ಹಲವರು ಬಂದರು ಪ್ರದೇಶದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಬಂದರು ಪ್ರದೇಶ ತುಂಬಾ ಸೂಕ್ಷ್ಮ ಪ್ರದೇಶ. ಹಾಗಾಗಿ, ಮುಂಜಾಗ್ರತಾ ಕ್ರಮವಾಗಿ 32 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಸದ್ಯ ವಶಕ್ಕೆ ಪಡೆದಿದ್ದ ಎಲ್ಲರನ್ನೂ ಬಿಡುಗಡೆ ಮಾಡಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದೆ" ಎಂದರು.

ಈ ಸುದ್ದಿ ಓದಿದ್ದೀರಾ?: ರಾಜ್ಯದ ಹಲವೆಡೆ ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ದಾಳಿ; ಹಲವರು ವಶಕ್ಕೆ

ಇಂದು ದೇಶದ ಹತ್ತಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‌ಐಎ, ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ರಾಜ್ಯ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಇದರ ಭಾಗವಾಗಿ ಮಂಗಳೂರಿನಲ್ಲೂ ಪಿಎಫ್‌ಐ ಸಂಘಟನೆಗಳ ಮೇಲೆ ಎನ್‌ಐಎ ದಾಳಿ ನಡೆಸಿತ್ತು. ಮಂಗಳೂರಿನಲ್ಲಿ ಪಿಎಫ್ಐ ಮುಖಂಡರಾದ ಅಶ್ರಫ್ ಎ ಕೆ, ಮೊಹಿದ್ದೀನ್ ಹಳೆಯಂಗಡಿ, ನವಾಜ್ ಕಾವೂರು ಎಂಬವರನ್ನು ಎನ್‌ಐಎ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. 

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180