ಭ್ರಷ್ಟಾಚಾರ ಪ್ರಕರಣ | ಸುಪ್ರೀಂ ಕೋರ್ಟಿನ ಆದೇಶ ಉಲ್ಲಂಘಿಸಿ ತನಿಖೆಗೆ ಆದೇಶ: ಬಿಎಸ್‌ವೈ ಪರ ವಕೀಲರ ವಾದ

b s yediyurappa
  • ವಿಚಾರಣೆಗೆ ಅನುಮತಿ ನೀಡಲು ಸಕ್ಷಮ ಪ್ರಾಧಿಕಾರದ ಅನುಮತಿ ಕಡ್ಡಾಯ
  • ಸಕ್ಷಮ ಪ್ರಾಧಿಕಾರ ಅನುಮತಿ ನಿರಾಕರಿಸಿದ್ದರೂ ತನಿಖೆಗೆ ಹೈಕೋರ್ಟ್‌ ಆದೇಶ

ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಇದು ಸುಪ್ರೀಂ ಕೋರ್ಟ್‌ ಆದೇಶದ ಉಲ್ಲಂಘನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. 

ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠದ ಮುಂದೆ ಯಡಿಯೂರಪ್ಪ ಪರವಾಗಿ ಹಿರಿಯ ವಕೀಲರಾದ ಮುಕುಲ್‌ ರೋಹ್ಟಗಿ, ಸಿದ್ಧಾರ್ಥ ಲೂತ್ರಾ ಹಾಗೂ ಸಿದ್ಧಾರ್ಥ ದವೆ ವಾದ ಮಂಡಿಸಿದರು.

"ವಿಚಾರಣೆಗೆ ಅನುಮತಿ ನೀಡಲು ಕಾನೂನಿನ ಪ್ರಕಾರ ಸಕ್ಷಮ ಪ್ರಾಧಿಕಾರದ ಅನುಮತಿ ಕಡ್ಡಾಯ. ಯಡಿಯೂರಪ್ಪ ಪ್ರಕರಣದಲ್ಲಿ ಸಕ್ಷಮ ಪ್ರಾಧಿಕಾರ ಅನುಮತಿ ನಿರಾಕರಿಸಿದ್ದರೂ, ಹೈಕೋರ್ಟ್‌ ಪ್ರಕರಣದ ವಿಚಾರಣೆ ನಡೆಸಲು ಅನುಮತಿ ನೀಡಿದೆ" ಎಂದು ರೋಹ್ಟಗಿ ವಾದಿಸಿದರು.

"ಪ್ರಕರಣದ ವಿಚಾರಣಾ ಹಂತದಲ್ಲಿ ಅನುಮತಿ ಕಡ್ಡಾಯ ಎಂದು ಹೈಕೋರ್ಟ್‌ ಹೇಳಿದೆ. ಆದರೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ಸೆಕ್ಷನ್‌ 17 (ಎ) ಪ್ರಕಾರ, ಜನಪ್ರತಿನಿಧಿಗಳ ಪ್ರಕರಣದಲ್ಲಿ ಸೂಕ್ತ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ತನಿಖೆ ಅಥವಾ ವಿಚಾರಣೆ ನಡೆಸುವಂತಿಲ್ಲ ಎಂಬ ನಿಯಮವನ್ನು ಹೈಕೋರ್ಟ್‌ ನಿರ್ಲಕ್ಷಿಸಿದೆ" ಎಂದು ಅವರು ವಾದ ಮಂಡಿಸಿದರು.

ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್‌ 23ಕ್ಕೆ ಮುಂದೂಡಿ ಆದೇಶಿಸಿತು. ಪ್ರಕರಣದಲ್ಲಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸುವ ಮೊದಲು ಮೂಲ ದೂರುದಾರ ಟಿ ಜೆ. ಬ್ರಹಾಂ ಅವರ ವಾದವನ್ನು ಆಲಿಸುವುದಾಗಿ ಪೀಠ ತಿಳಿಸಿತು.

ಏನಿದು ಪ್ರಕರಣ?

ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್‌ ಕಂಪನಿಯಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ. ಜೊತೆಗೆ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ ಜೆ ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು.

ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಅಬ್ರಹಾಂ ಅವರು ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಬದಿಗೆ ಸರಿಸಿತ್ತು.

ಈ ಸುದ್ದಿ ಓದಿದ್ದೀರಾ?: ಮಳೆಗಾಲ ಅಧಿವೇಶನ | ಪಂಚಮಾಸಲಿ 2ಎ ಮೀಸಲಾತಿ ಕಲ್ಪಿಸುವ ಬಗ್ಗೆ ಕಾನೂನು ರೀತಿ ನಿರ್ಧಾರ : ಸಿಎಂ ಬೊಮ್ಮಾಯಿ

ಅಲ್ಲದೆ, ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರನ್ನು ಮರುಪರಿಗಣಿಸಲು ಹೈಕೋರ್ಟ್ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. 

ಯಡಿಯೂರಪ್ಪ, ಪುತ್ರ ಬಿ ವೈ ವಿಜಯೇಂದ್ರ, ಪುತ್ರಿ ಪದ್ಮಾವತಿ ಅವರ ಅಳಿಯ ಸಂಜಯ್ ಶ್ರೀ, ಶಶಿಧರ ಮರಡಿ, ಚಂದ್ರಕಾಂತ್ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಮತ್ತು ಹಾಲಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ ಸಿ ಪ್ರಕಾಶ್, ಕೆ ರವಿ, ಯಡಿಯೂರಪ್ಪ ಅವರ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. 

ನಿಮಗೆ ಏನು ಅನ್ನಿಸ್ತು?
0 ವೋಟ್