
- ಗೃಹ ಕಚೇರಿ ಕೃಷ್ಣಾ ಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ
- ಹಲವು ಮಠಾಧೀಶರಿಂದ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ
ಎಸ್ಸಿ, ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ.
ಈ ಸಂಬಂಧ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀಗಳೇ ಖುದ್ದು ಗೃಹ ಕಚೇರಿ ಕೃಷ್ಣಾಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದರು.
ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಅವರ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ.17ಕ್ಕೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಶ್ರೀಗಳು, “ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಿದೆ. ಆದ್ದರಿಂದ, ನಮ್ಮ ಧರಣಿ ಸತ್ಯಾಗ್ರಹವನ್ನು ಅಂತಿಮಗೊಳಿಸಿದ್ದೇವೆ. ವಿಧಾನಸೌಧದ ಮುಂಭಾಗ ಭಾನುವಾರ ನಡೆಯುವ ಐತಿಹಾಸಿಕ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸುತ್ತೇವೆ” ಎಂದು ತಿಳಿಸಿದರು.
“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಸದಸ್ಯರು ಮತ್ತು ಎಲ್ಲ ಶಾಸಕರಿಗೆ ಅಭಿನಂದಿಸುತ್ತೇನೆ. ಜತೆಗೆ, ನಮ್ಮ ಎಲ್ಲ ಎಸ್ಸಿ-ಎಸ್ಟಿ ಮಠಾಧೀಶರು, ಆತ್ಮೀಯ ಪೂಜ್ಯರು, ಸಮುದಾಯದ ಸ್ವಾಭಿಮಾನಿ ಸಂಘಟನೆಗಳ ಮುಖಂಡರು ಮತ್ತು ಮೀಸಲಾತಿ ಹೋರಾಟ ಸಮಿತಿಯ ಎಲ್ಲ ಪದಾಧಿಕಾರಿಗಳಿಗೆ ಅಭಿನಂದಿಸುತ್ತೇನೆ” ಎಂದು ಅವರು ಶ್ರೀಗಳು ತಿಳಿಸಿದರು.
ಗೃಹ ಕಚೇರಿ ಕೃಷ್ಣ ಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಶ್ರೀಗಳು ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಿದ್ದಂತೆಯೇ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿ, ಗೃಹ ಕಚೇರಿ ಕೃಷ್ಣಾ ಮುಂದೆಯೇ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇದಕ್ಕೂ ಮುಂಚೆ ಸಚಿವರಾದ ಶ್ರೀರಾಮುಲು ಮತ್ತು ಆರ್ ಅಶೋಕ್ ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಶ್ರೀಗಳನ್ನು ಭೇಟಿ ಮಾಡಿದರು. ಮೀಸಲಾತಿ ಹೆಚ್ಚಳ ನಿರ್ಧಾರ ಪ್ರಕಟವಾಗಿದ್ದರಿಂದ ಪ್ರಸನ್ನಾನಂದಪುರಿ ಶ್ರೀಗಳು ಮತ್ತು ಇತರೆ ಸ್ವಾಮೀಜಿಗಳು ಸಚಿವರಿಗೆ ಸಿಹಿ ತಿನ್ನಿಸಿ ಸಂತಸ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಭಾರತ್ ಜೋಡೋ ಯಾತ್ರೆ | ಕರ್ನಾಟಕದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ: ರಾಹುಲ್ ಗಾಂಧಿ ವಿಶ್ವಾಸ
ಮೀಸಲಾತಿ ಹೆಚ್ಚಳ ಅನುಮೋದಿಸಿದ ಸಚಿವ ಸಂಪುಟ
ಶನಿವಾರ ಬೆಳಿಗ್ಗೆ 12 ಗಂಟೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಹೆಚ್ಚಳದ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಸಾಧಕ-ಬಾಧಕಗಳ ಚರ್ಚೆ ಬಳಿಕ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಸಚಿವ ಮಾಧುಸ್ವಾಮಿ, “ಎಸ್ ಸಿ, ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸರ್ಕಾರ ಕೂಡಲೇ ಆದೇಶದ ಮೂಲಕ ಜಾರಿ ಮಾಡುತ್ತದೆ” ಎಂದರು.