ಎಸ್‌ ಎಂ ಕೃಷ್ಣ ಆರೋಗ್ಯ ವಿಚಾರಿಸಿದ ಹಾಲಿ, ಮಾಜಿ ಮುಖ್ಯಮಂತ್ರಿಗಳು

  • ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಎಸ್‌ಎಂಕೆ
  • ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ 

ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿದರು.

Image

ಚಿಕಿತ್ಸೆ ಪಡೆಯುತ್ತಿರುವ ಕೃಷ್ಣ ಅವರನ್ನು ಕಂಡು ಮಾತನಾಡಿಸಿ, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಗುಣಮುಖರಾಗುವಂತೆ ಬೊಮ್ಮಾಯಿ ಹಾರೈಸಿದರು. ಬಳಿಕ ಕೃಷ್ಣ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬೊಮ್ಮಾಯಿ, ಹಿರಿಯ ನಾಯಕರಾದ ಎಸ್ ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದರು.

ನಿರಂತರ ಚಿಕಿತ್ಸೆಯಿಂದ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗುತ್ತಾರೆ. ರಾಜ್ಯದ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಬೊಮ್ಮಾಯಿ ಹೇಳಿದರು.

ಭಾನುವಾರ ಮಧ್ಯಾಹ್ನ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ತೆರಳಿದ ಯಡಿಯೂರಪ್ಪ ಕೂಡ ಎಸ್‌ ಎಂ ಕೃಷ್ಣ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

Image

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಟ್ವೀಟ್‌ ಮಾಡಿ ಕೃಷ್ಣ ಅವರ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ. 

ಶನಿವಾರ ರಾತ್ರಿ ಜ್ವರದಿಂದ ಬಳಲುತ್ತಿದ್ದ ಎಸ್ ಎಂ ಕೃಷ್ಣ ಅವರನ್ನು ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ತಡರಾತ್ರಿ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೈಸೂರಿನ ಡಾ.ಸತ್ಯನಾರಾಯಣ ಮತ್ತು ಡಾ.ಸುನೀಲ್ ಕಾರಂತ್ ಅವರ ನೇತೃತ್ವದ ತಂಡ ಮಾಜಿ ಮುಖ್ಯಮಂತ್ರಿಗಳಿಗೆ ಚಿಕಿತ್ಸೆ ನೀಡುತ್ತಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್