
- ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರ ನೇಮಕ
- ರಾಷ್ಟ್ರೀಯ ಮಾನವ ಆಯೋಗದ ಸದಸ್ಯರಾಗಿದ್ದ ಶಿವರಾಜ್ ವಿ ಪಾಟೀಲ್
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ಅವರನ್ನು ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಶುಕ್ರವಾರ ಈ ಸಂಬಂಧ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶಿವರಾಜ್ ವಿ ಪಾಟೀಲ್ ಅವರನ್ನು ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿಸಿ ನೇಮಿಸಿ ಆದೇಶಿಸಿದೆ.

ಶಿವರಾಜ್ ವಿ ಪಾಟೀಲರು ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇದಕ್ಕೂ ಮುನ್ನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕೇಂದ್ರ ರೇಷ್ಮೆ ಮಂಡಳಿ, ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯಗಳಲ್ಲಿ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸಿದರು.
ನ್ಯಾಯಾಂಗ ಕ್ಷೇತ್ರದಲ್ಲಿನ ಇವರ ಸೇವೆಯನ್ನು ಗುರುತಿಸಿ ಗುಲ್ಬರ್ಗಾ ವಿಶ್ವವಿದ್ಯಾನಿಲಯ 2004ರಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತ್ತು. ಶಿವರಾಜ್ ಪಾಟೀಲರು ರಾಷ್ಟ್ರೀಯ ಮಾನವ ಆಯೋಗದ ಸದಸ್ಯರಾಗಿ 2005 ರಿಂದ 2008 ರವರೆಗೆ ಸೇವೆ ಸಲ್ಲಿಸಿದ್ದರು. ತದನಂತರ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬಳಿಕ ರಾಜ್ಯ ಲೋಕಾಯುಕ್ತರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.