'ಕಳ್ಳ ಮಾರ್ಗ'ದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು 'ರಾಜ ಮಾರ್ಗ'ವೇ?: ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ

h d kumaraswamy
  • ‘ನಿಮ್ಮಂಥ ಪ್ರಾಜ್ಞರೇ 'ಆಪರೇಷನ್ ಕಮಲ' ಎಂಬ ಪಾಪ ಎಸಗಿದ್ದೇಕೆ?’
  • ‘₹50 ಕೋಟಿ ಅನುದಾನದ ಒಳಗುಟ್ಟಿನ ಬಗ್ಗೆಯೂ ಚರ್ಚಿಸೋಣ ಬನ್ನಿ’

'ಕಳ್ಳ ಮಾರ್ಗʼದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ ʼರಾಜ ಮಾರ್ಗʼ ಎಂದು ಎಚ್ ಡಿ ಕುಮಾರಸ್ವಾಮಿ ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥನಾರಾಯಣ ವಿರುದ್ಧ ಹರಿಹಾಯ್ದಿದ್ದಾರೆ.

ಭಾನುವಾರ ಬೆಳಿಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಅಭಿವೃದ್ಧಿ ಕೆಲಸ ಎಂದರೇನು ಸಿ ಎನ್ ಅಶ್ವತ್ಥ ನಾರಾಯಣ ಅವರೇ? ವಾಮಮಾರ್ಗ ಎಂದರೆ ಯಾವುದು? ಇವೆರಡರಲ್ಲೂ ತಮಗೆ ಒಳ್ಳೇ ಅನುಭವವೇ ಇದೆ. ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ʼಕಳ್ಳ ಮಾರ್ಗʼದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ ರಾಜಮಾರ್ಗ” ಎಂದು ಪ್ರಶ್ನಿಸಿದ್ದಾರೆ.

“ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂದು ನಾನು ಭಾವಿಸಿದ್ದಿದ್ದರೆ ನೀವು ಮಲ್ಲೇಶ್ವರದಲ್ಲಿ ಶಾಸಕರೇ ಆಗುತ್ತಿರಲಿಲ್ಲ. ಆ ದಿನಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ. ಇನ್ನು, ಅಭಿವೃದ್ಧಿ ಬಗ್ಗೆ ಉಪದೇಶ ಮಾಡಿದ್ದೀರಿ. ನಿಮ್ಮ ಮಾದರಿಯಲ್ಲಿ ಅಭಿವೃದ್ಧಿ ಮಾಡಿಕೊಳ್ಳುವುದು ನನಗೆ ಗೊತ್ತಿಲ್ಲ. ನನ್ನಿಂದ ಆಗುವುದೂ ಇಲ್ಲ” ಎಂದು ವ್ಯಂಗ್ಯ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತ್ ಜೋಡೋ ಯಾತ್ರೆ | ಬದನವಾಳು ಸರ್ಕಾರಿ ಶಾಲೆ ಮೇಲೆ ರಾಹುಲ್ ಹಸ್ತದ ಗುರುತು

“ಅಶ್ವತ್ಥನಾರಾಯಣ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ ಎಂದು ವೇದಾಂತ ಹೇಳಿದ್ದೀರಿ. ಹೌದು; ಇಂಥ ಉದಾತ್ತ, ಆದರ್ಶ ಚಿಂತನೆಯ, ವಿಶಾಲ ಹೃದಯ ವೈಶಾಲ್ಯವುಳ್ಳ ನಿಮ್ಮಂಥ ಪ್ರಾಜ್ಞರೇ ಆಪರೇಷನ್ ಕಮಲ ಎಂಬ ಪಾಪ ಎಸಗಿದ್ದೇಕೆ? ನಮ್ಮ ಶಾಸಕರ ಮನೆಯಲ್ಲಿ ಹಣ ಇಟ್ಟು ಬಂದ್ದಿದ್ದು ಯಾಕೆ” ಎಂದು ಟೀಕಿಸಿದ್ದಾರೆ.

“ಅಧಿಕಾರ ಬೇಕಿದ್ದರೆ ನೀವು ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗುವವರೆಗೂ ಕಾಯಬಹುದಿತ್ತಲ್ಲವೇ? ಆದರೆ, ಹಪಾಹಪಿಯಿಂದ ʼಅಡ್ಡ ಮಾರ್ಗʼ ಹಿಡಿದಿದ್ದು ಏಕೆ? ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಅಪಹರಿಸಿ ಆಪರೇಷನ್‌ ಕಮಲದ ಸರ್ಕಾರ ಮಾಡಿದ್ದು ಯಾಕೆ? ಇದು ವಾಮಮಾರ್ಗವೋ, ಸನ್ಮಾರ್ಗವೋ ಸ್ಪಲ್ಪ ಹೇಳಿ ಅಶ್ವತ್ಥನಾರಾಯಣ ಅವರೇ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಸರ್ಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಆಗ ಯಾರ ಆತ್ಮಸಾಕ್ಷಿ ಏನು ಎಂಬುದು ಜನರಿಗೂ ತಿಳಿಯುತ್ತದೆ. ʼಎಂಎಲ್‌ಸಿ ಕೋರಿಕೆ ಮೇರೆಗೆ..ʼ ಎಂದು ಬಿಡುಗಡೆ ಮಾಡಿದ ₹50 ಕೋಟಿ ಒಳಗುಟ್ಟಿನ ಬಗ್ಗೆಯೂ ಚರ್ಚಿಸೋಣ ಬನ್ನಿ. ನಾನು ತಯಾರಿದ್ದೇನೆ” ಎಂದು ಬಹಿರಂಗ ಸವಾಲು ಹಾಕಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್