ಡಿ ದೇವರಾಜ ಅರಸು ಹೆಸರಿನಲ್ಲಿ ಜಿಲ್ಲಾ ಮಟ್ಟದಲ್ಲಿಯೂ ಪ್ರಶಸ್ತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

  • ಆ. 20 ರಿಂದ 22 ರವರೆಗೆ ಮೂರು ದಿನ ಅರಸು ಉತ್ಸವ: ಕೋಟ ಶ್ರೀನಿವಾಸ್ ಪೂಜಾರಿ
  • ಕಾರ್ಯಕ್ರಮಕ್ಕೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ

'ಆ. 20ರಂದು ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ. ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯನ್ನು ಈ ಬಾರಿ ‘ಹಿಂದುಳಿದ ವರ್ಗಗಳ ದಿನಾಚರಣೆ’ ಎಂದು ಆಚರಿಸಿ ಜಿಲ್ಲಾ ಮಟ್ಟದಲ್ಲಿಯೂ ಪ್ರಶಸ್ತಿ ನೀಡಲಾಗುವುದು' ಎಂದು ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಂಗಳೂರು ನಗರದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಹಿಂದೆ ರಾಜ್ಯ ಮಟ್ಟದಲ್ಲಿ ಮಾತ್ರ ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ದೇವರಾಜ್ ಅರಸು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿತ್ತು. ಇದೀಗ ಜಿಲ್ಲಾ ಮಟ್ಟದಲ್ಲಿಯೂ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು' ಎಂದರು.

“ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆಗಸ್ಟ್ 20 ರಂದು ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ವತಿಯಿಂದ ಪ್ರಶಸ್ತಿಯನ್ನು ನೀಡಲಾಗುವುದು. ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಆಯ್ಕೆ ಸಮಿತಿ ರಚಿಸಲಾಗಿದೆ. ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿವೆ. ಸಮಿತಿಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಹಾಗೂ ಇತರರನ್ನು ಒಳಗೊಂಡಿರುತ್ತದೆ. ಪ್ರಶಸ್ತಿಯು 50,000 ರೂ. ನಗದು ಒಳಗೊಂಡಿರುತ್ತದೆ” ಎಂದು ಸಚಿವರು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಾಣಿಕ್ ಷಾ ಮೈದಾನದಲ್ಲಿ ರಾಣಿ ಚೆನ್ನಮ್ಮ, ಟಿಪ್ಪು ಸುಲ್ತಾನ್ ಹೆಸರು ಕೈಬಿಟ್ಟ ಬೊಮ್ಮಾಯಿ ಸರ್ಕಾರ

“ಅರಸು ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಆ. 20 ರಿಂದ 22ರವರೆಗೆ ಮೂರು ದಿನಗಳ ಕಾಲ ಅರಸು ಉತ್ಸವವನ್ನು ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗುವುದು. ಆ. 20ರ ಮಧ್ಯಾಹ್ನದಿಂದ ಪ್ರಾರಂಭವಾಗುವ ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಚಾಲನೆ ನೀಡಲಿದ್ದಾರೆ. ಈ ಉತ್ಸವದಲ್ಲಿ ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳಾದ ಕುಲಕಸುಬುಗಾರರಿಂದ ತಯಾರಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಸ್ಥಾಪಿಸಲಾಗುತ್ತದೆ. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು” ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮತ್ತು ಮುಖಂಡ ಆರ್ ಸಿ ನಾರಾಯಣ್ ಹಾಜರಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್