ಶಿರಾ ಕ್ರೂಸರ್ ಅಪಘಾತ ಪ್ರಕರಣ | ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರಕ್ಕೆ ಪ್ರತಿಪಕ್ಷ ನಾಯಕರ ಆಗ್ರಹ

Sira Accident
  • ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಕ್ರೂಸರ್ ಅಪಘಾತ
  • ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ 9 ಜನ ಸಾವು

ಶಿರಾ ತಾಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆ.25) ಬೆಳಗಿನಜಾವ ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಭೀಕರವಾಗಿ ಸಾವನ್ನಪ್ಪಿದ್ದಾರೆ.

ಕ್ರೂಸರ್‍‌ನಲ್ಲಿದ್ದ 25ಕ್ಕೂ ಹೆಚ್ಚು ಜನರಲ್ಲಿ 9 ಜನ ಮೃತಪಟ್ಟಿದ್ದು, 14 ಜನರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರ ಮತ್ತು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.

ಈ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, “ತುಮಕೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವ ಸುದ್ದಿ ಕೇಳಿ ಸಂಕಟವಾಯಿತು. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ “ತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕೀಡಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಮೃತಪಟ್ಟವರು ಕೂಲಿಕಾರ್ಮಿಕರು, ಬದಕು ಕಟ್ಟಿಕೊಳ್ಳಲು ಅವರೆಲ್ಲರೂ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದರೆಂದು ತಿಳಿದು ನನಗೆ ಅತೀವ ದುಃಖವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ತಕ್ಷಣವೇ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಕ್ರಮ ವಹಿಸಿ ಜೀವ ಕಳೆದುಕೊಂಡಿರುವವರ ಎಲ್ಲ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸುತ್ತೇನೆ. ಗಾಯಾಳುಗಳೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಘಟನೆ ವಿವರ:

ತುಮಕೂರು ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳದಲ್ಲಿ  ಕ್ರೂಸರ್‍‌ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿ, 14 ಜನ ಗಂಭೀರವಾಗಿದ್ದಾರೆ. ಮೃತರೆಲ್ಲರೂ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನವರಾಗಿದ್ದಾರೆ. ಕ್ರೂಸರ್‍‌ನಲ್ಲಿದ್ದವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ಕೆಲಸಕ್ಕಾಗಿ ಗುಳೆ ಹೊರಟ್ಟಿದ್ದರು.

ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಗೊಂಡವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನಿಮಗೆ ಏನು ಅನ್ನಿಸ್ತು?
2 ವೋಟ್